ಮೂಡುಬಿದಿರೆ ಜ್ಯೋತಿನಗರ ಶಾಲೆಯಲ್ಲಿ ವಿಶೇಷ ಮಕ್ಕಳಿಗಾಗಿ 'ಕ್ರೀಡೆ- ಅರಿವು' ಕಾರ್ಯಕ್ರಮ
ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಕ್ಷೇತ್ರ ಸಮನ್ವಯ ಕೇಂದ್ರ ಮೂಡುಬಿದಿರೆ ಇವುಗಳ ಸಹಯೋಗದೊಂದಿಗೆ, ಜ್ಯೋತಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಮಕ್ಕಳು ಹಾಗೂ ಅವರ ಪೋಷಕರಿಗಾಗಿ ‘ಕ್ರೀಡೆ ಮತ್ತು ಅರಿವು’ ಕಾರ್ಯಕ್ರಮವು ಮಂಗಳವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಖಾದರ್ ಅವರು ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯದ ನಿಯಮಗಳ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು. ವಿಶೇಷ ಮಕ್ಕಳ ಪಾಲನೆಯಲ್ಲಿ ಪೋಷಕರು ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಅವರು ಅರಿವು ಮೂಡಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ಶ್ಮತಿ ಸೌಮ್ಯ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಮಾರ್ಗರೇಟ್ ಅವರು ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ಹೇಮಾ ಅವರು ಕಾರ್ಯಕ್ರಮ ನಿರೂಪಿಸಿದರು.
ದೈಹಿಕ ಶಿಕ್ಷಣ ಶಿಕ್ಷಕಿಯರಾದ ಶಾಂತಿ ಮತ್ತು ಚಂದ್ರಿಕಾ ಅವರು ವಿಶೇಷ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದ್ದರು. ಕ್ರೀಡಾ ಚಟುವಟಿಕೆಗಳ ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರಿಗೂ ಮನರಂಜನೆ ನೀಡಿದವು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಹುಮಾನಗಳನ್ನು ವಿತರಿಸಲಾಯಿತು.
ಕ್ಷೇತ್ರ ಸಂಪನ್ಮೂಲ ಕೇಂದ್ರದ ಬಿ.ಐ.ಆರ್.ಟಿ ಸಿಬ್ಬಂದಿಗಳಾದ ಸುಶೀಲಾ ಹೆಗ್ಡೆ ಮತ್ತು ಫ್ಲೇವಿ ಸಹಕರಿಸಿದರು.



0 Comments