ಮೂಡುಬಿದಿರೆ: ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು, ಸ್ಪಷ್ಟ ಗುರಿಯೊಂದಿಗೆ ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಅಧ್ಯಕ್ಷ ವಿವೇಕ್ ಆಳ್ವ ನುಡಿದರು.
ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಶನಿವಾರದಂದು ಸಂಸ್ಥೆಯ ಡಾ/ ವಿ.ಎಸ್ ಆಚಾರ‍್ಯ ಸಭಾಂಗಣದಲ್ಲಿ ನಡೆದ ಪಿಯುಸಿ ಮತ್ತು ಸಿ.ಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರ‍್ಯಾಂಕ್‌ಗಳಿಸಿದ ವಿದ್ಯಾರ್ಥಿ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಜೀವನದಲ್ಲಿ ಅಂಕಗಳು ಮಹತ್ವದ ಪಾತ್ರ ವಹಿಸಿದರೂ, ಅಂಕಗಳ ಜೊತೆಗೆ ಜ್ಞಾನ, ಕೌಶಲ, ಶಿಸ್ತು, ಸೃಜನಶೀಲತೆ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವುದು ಅಗತ್ಯ. ಶಿಕ್ಷಣದ ಉದ್ದೇಶ ಕೇವಲ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದಕ್ಕೆ ಸೀಮಿತವಾಗಿರದೆ, ಜೀವನದ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸುವ ಸಾಮರ್ಥ್ಯವನ್ನು ಬೆಳೆಸುವುದಾಗಿರಬೇಕು. . ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಪಠ್ಯಜ್ಞಾನದ ಜೊತೆಗೆ ಹೊಸ ವಿಷಯಗಳನ್ನು ಕಲಿಯುವ ಆಸಕ್ತಿ ಬೆಳೆಸಿಕೊಳ್ಳಬೇಕು. ತಂತ್ರಜ್ಞಾನ ಹಾಗೂ ಬದಲಾಗುತ್ತಿರುವ ವೃತ್ತಿ ಕ್ಷೇತ್ರಗಳಿಗೆ ಹೊಂದಿಕೊಳ್ಳುವ ಕೌಶಲವನ್ನು ಬೆಳೆಸಿಕೊಂಡು, ತಮ್ಮದೇ ಆದ ವಿಶಿಷ್ಟ ಗುರುತನ್ನು ನಿರ್ಮಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಗುರಿಗಳನ್ನು ಹೊಂದಿ ಸಮಾಜಕ್ಕೆ ಉಪಯುಕ್ತವಾದ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕಳೆದ ಬಾರಿ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ, ಸಿ.ಎಸ್ ಅಂತಿಮ ಪರೀಕ್ಷೆ ಉತ್ತೀರ್ಣರಾದ ಅನನ್ಯ, ಹಾಗೂ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ 15 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲೆ ಜಾನ್ಸಿ ಪಿ.ಎನ್ , ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ, ಸಾಧಕ ವಿದ್ಯಾರ್ಥಿಗಳ ಪೋಷಕರು ಇದ್ದರು. ಸಂಖ್ಯಾಶಾಸ್ತ್ರವಿಭಾಗದ ಮುಖ್ಯಸ್ಥ ಪ್ರಭಾತ್ ಎಸ್.ಆರ್ ಸ್ವಾಗತಿಸಿ, ಇಂಗ್ಲೀಷ್ ವಿಭಾಗದ ಉಪನ್ಯಾಸಕ ರಾಜೇಶ್ ಡಿಸೋಜಾ ಕಾರ್ಯಕ್ರಮವನ್ನು ನಿರೂಪಿಸಿದರು.

0 Comments