ಕೊಡಂಗಲ್ಲಿನಲ್ಲಿ ಕೊಳಚೆ ನೀರು ರಸ್ತೆ ಮತ್ತು ಬಾವಿಗೆ : ಸೂಕ್ತ ಕ್ರಮಕ್ಕಾಗಿ ಸ್ಥಳೀಯರ ಆಗ್ರಹ

ಕೊಡಂಗಲ್ಲಿನಲ್ಲಿ ಕೊಳಚೆ ನೀರು ರಸ್ತೆ ಮತ್ತು ಬಾವಿಗೆ : ಸೂಕ್ತ ಕ್ರಮಕ್ಕಾಗಿ ಸ್ಥಳೀಯರ ಆಗ್ರಹ 
ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕೊಡಂಗಲ್ಲು ಪರಿಸರದಲ್ಲಿ ಕೊಳಚೆ ನೀರು ರಸ್ತೆ ಮಧ್ಯೆ ಮತ್ತು ಬಾವಿಗಳಿಗೆ ಹರಿಯುತ್ತಿದ್ದು ಇದರಿಂದಾಗಿ ಸ್ಥಳೀಯ ನಿವಾಸಿಗಳು ಸಮಸ್ಯೆಯನ್ನು ಎದುರಿಸುತ್ತಿದ್ದು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. 
ಸ್ಥಳೀಯ ನಿವಾಸಿ ಶಿಕಾರಿಪುರ ಈಶ್ವರ್ ಭಟ್ ಸೋಮವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಕೊಡಂಗಲ್ಲು ಪರಿಸರದ ಜನರು ಕಳೆದ ಎಂಟು ವರುಷಗಳಿಂದ  ಕೊಳಚೆ ನೀರಿನ ಸಮಸ್ಯೆಯನ್ನು ಅನುಭವಿಸುತ್ತಾ ಬರುತ್ತಿದ್ದಾರೆ.  ಒಳಚರಂಡಿ ಕಾಮಗಾರಿ ಸರಿಯಾಗಿ ನಡೆಯದ ಕಾರಣ ಕಲುಷಿತ ನೀರು ಸುತ್ತಮುತ್ತಲಿನ ಬಾವಿಗಳಿಗೆ ಸೇರಿ, ಕುಡಿಯಲು ಹಾಗೂ ಬಳಕೆಗೆ ಯೋಗ್ಯವಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದನ್ನು ಶಾಶ್ವತವಾಗಿ ಪರಿಹರಿಸುವಂತೆ ಈಗಾಗಲೇ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಲಿಖಿತವಾಗಿ ಮತ್ತು ಮೌಖಿಕವಾಗಿ ದೂರು ಹಾಗೂ ಮನವಿಗಳನ್ನು ಸಲ್ಲಿಸಲಾಗಿದೆ. 
ಅಧಿಕಾರಿಗಳು ಸಮಸ್ಯೆಯನ್ನು ಪರಿಶೀಲಿಸಿ ಪರಿಹಾರ ಒದಗಿಸುವ ಭರವಸೆ ನೀಡಿದ್ದರೂ, ಈವರೆಗೆ ಸಮಸ್ಯೆ ಬಗೆಹರಿದಿಲ್ಲ. ಬದಲಾಗಿ, ತಾತ್ಕಾಲಿಕ ಕ್ರಮಗಳನ್ನು ಕೈಗೊಂಡು ಸಮಸ್ಯೆಯನ್ನು ಮುಂದೂಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಸ್ಯೆಗೆ ತಾತ್ಕಾಲಿಕ ಪರಿಹಾರ ನೀಡುವ ಬದಲು ಶಾಶ್ವತ ಕ್ರಮ ಕೈಗೊಳ್ಳುವಂತೆ ನಿವಾಸಿಗಳು ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
 ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ,ಪುರಸಭೆ, ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.
ಕೊಳಚೆ ನೀರು ರಸ್ತೆಗಳ ಮೇಲೆ ಹರಿಯುವುದರಿಂದ ದುರ್ವಾಸನೆ ಹರಡುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೂ ತೀವ್ರ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಪಾದಚಾರಿಗಳು ಹಾಗೂ ವಾಹನ ಸವಾರರು ಪ್ರತಿದಿನ ಸಂಚರಿಸುತ್ತಾರೆ. ಕೊಳಚೆ ನೀರಿನ ಸಮಸ್ಯೆಯಿಂದ ಸಾವ೯ಜನಿಕರಿಗೂ ತೊಂದರೆಯಾಗುತ್ತಿದ್ದು, ಸ್ಥಳೀಯ ನಿವಾಸಿಗಳ ಸಂಕಷ್ಟಗಳಿಗೆ ಪುರಸಭೆ ಸ್ಪಂದಿಸಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.
ಸಮಸ್ಯೆಗೆ ಸಂಬಂಧಿಸಿದಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಮುನ್ಸಿಪಾಲಿಟಿಯ ನಿರ್ಲಕ್ಷ್ಯದಿಂದಾಗಿ ನಿವಾಸಿಗಳು ನಿರಂತರ ಸಂಕಷ್ಟ ಅನುಭವಿಸುವಂತಾಗಿದೆ. ಸಮಸ್ಯೆಯ ಗಂಭೀರತೆಯನ್ನು ಗಮನಿಸಿ ಸಂಬಂಧಪಟ್ಟ ಇಲಾಖೆ, ಪುರಸಭೆ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ಕೊಳಚೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಯೋಜನೆ ರೂಪಿಸಿ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಬೇಕು. ಸಮಸ್ಯೆ ಬಗೆಹರಿಯದಿದ್ದಲ್ಲಿ ಅನಿವಾರ್ಯವಾಗಿ ಉಪವಾಸ ಸತ್ಯಾಗ್ರಹ ಹಾಗೂ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುವುದರ ಜೊತೆಗೆ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ನಿವಾಸಿಗಳು ಎಚ್ಚರಿಸಿದ್ದಾರೆ.


ನಿವಾಸಿಗಳಾದ ಶಂಕರನಾರಾಯಣ ಭಟ್, ಶಿವಪ್ಪ ಪೂಜಾರಿ, ನಾಗರಾಜ ಭಟ್ ಸುದ್ದಿಗೋಷ್ಠಿಯಲ್ಲಿದ್ದರು.

Post a Comment

0 Comments

Advertisement